ಮಡಿಕೇರಿ ಮೇ.11: ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಮೇ, 13 ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆ ಅಧಿಕಾರಿಗಳಿಗೆ ಗುರುವಾರ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಮತ ಎಣಿಕೆ ಪ್ರಕ್ರಿಯೆಯು ಮೇ, 13 ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಚುನಾವಣಾ ಆಯೋಗದ ನಿಯಮದ ಪ್ರಕಾರ ಮತ ಎಣಿಕೆ ಕೈಗೊಳ್ಳಬೇಕು. ಮತ ಎಣಿಕೆ ಸ್ಥಳಕ್ಕೆ ಮೊಬೈಲ್ ತರಬಾರದು. ಮತ ಎಣಿಕೆ ಕಾರ್ಯವು ಸರಳ ಪ್ರಕ್ರಿಯೆ ಆಗಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ ಚುನಾವಣಾಧಿಕಾರಿ ಗಮನಕ್ಕೆ ತರಬೇಕು. ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಕಾರ್ಯನಿರ್ವಹಿಸಲಿದ್ದು, ಜೊತೆಗೆ ಮೈಕ್ರೋ ವೀಕ್ಷಕರು ಇರಲಿದ್ದಾರೆ. ಎದುರಿಗೆ ವಿವಿಧ ಪಕ್ಷದ ಏಜೆಂಟರು ಇರುತ್ತಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರು ವಿವರಿಸಿದರು.