ಮಡಿಕೇರಿ: ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಜಟಿಲ ಸಮಸ್ಯೆಗಳ ಪರಿಹಾರಕ್ಕಾಗಿ ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸದಸ್ಯ ಹಾಗೂ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಮನವಿ ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಕೊಡಗಿಗೆ ಸಚಿವ ಸ್ಥಾನ ದೊರೆತ್ತಿದೆ, ಈ ಬಾರಿಯೂ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಕಳೆದ 20-25 ವರ್ಷಗಳಿಂದ ಜಿಲ್ಲೆಯ ಗಡಿ ಗ್ರಾಮಗಳು ಸೇರಿದಂತೆ ವಿವಿಧ ಪ್ರದೇಶಗಳು ಅಭಿವೃದ್ಧಿ ಶೂನ್ಯವಾಗಿದೆ. ಮೂಲಭೂತ ಸಮಸ್ಯೆಗಳಿಗೆ ಪರಿಹಾರವೇ ಇಲ್ಲದೆ ಜನಸಾಮಾನ್ಯರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸೂಚಿಸಲು ಸಾಧ್ಯವಾಗಿಲ್ಲ. ಇದೀಗ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಬೇಧಿಸಿರುವ ಕಾಂಗ್ರೆಸ್ ನ ಉತ್ಸಾಹಿ ಯುವ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಯಾಗಿದ್ದು, ಮುಂದಿನ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಸಮಸ್ಯೆಗಳನ್ನು ಸರ್ಕಾರದ ಮುಂದೆ ಸಮರ್ಥವಾಗಿ ಮಂಡಿಸಲು ಮತ್ತು ಇಲ್ಲಿನ ಸ್ಥಿತಿಗತಿಗಳನ್ನು ಮನವರಿಕೆ ಮಾಡಿಕೊಡಲು ನಮ್ಮ ಶಾಸಕರು ಸಚಿವರಾಗುವ ಅಗತ್ಯವಿದೆ. ಕೊಡಗಿನ ಜನರ ಅಪೇಕ್ಷೆಯೂ ಇದೇ ಆಗಿದ್ದು, ವರಿಷ್ಠರು ಸ್ಪಂದಿಸಲಿದ್ದಾರೆ ಎಂದು ಬಾಲಚಂದ್ರನ್ ನಾಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.