ನಾಪೋಕ್ಲು: ಆಕ್ರಮ ಗಾಂಜಾ ಸೇವನೆ ನಾಲ್ವರ ಬಂಧನ

ನಾಪೋಕ್ಲು : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ನಾಪೋಕ್ಲು ಸಮೀಪದ ಎಮ್ಮೆಮಾಡು ಕೂರುಳಿ ಗ್ರಾಮದ ಕೂಡು ರಸ್ತೆಬಳಿಯಲ್ಲಿ ನಾಲ್ವರು ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ತಕ್ಷಣ ಸ್ಥಳಕ್ಕೆ ಧಾವಿಸಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ವಿರಾಜಪೇಟೆ ನಿವಾಸಿ ಕೆ. ಎಸ್.ಅಶ್ರಫ್, ಎಮ್ಮೆಮಾಡು ಕೂರುಳಿ ಗ್ರಾಮದ ನಿವಾಸಿಗಳಾದ ಪಿ.ಎಂ. ಹಸೈನಾರ್, ಕೆ.ಎ. ಬಶೀರ್, ಕೆ.ಯು. ಹಕೀಮ್ ಎಂಬ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಳಿಕ ಇವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ನಾಪೋಕ್ಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸಾರ್ವಜನಿಕರು ಠಾಣೆಯ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡುವಂತೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದೆಂದು ಠಾಣಾಧಿಕಾರಿ ತಿಳಿಸಿದ್ದಾರೆ.ಮೊ.9480804948.

✍️….ವರದಿ: ಝಕರಿಯ ನಾಪೋಕ್ಲು