ನಾಪೋಕ್ಲು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ. ಎ. ಹಾರಿಸ್ ಉದ್ಘಾಟಿಸಿ ಮಾತನಾಡಿ ಈ ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಸೂಕ್ತ ವೇದಿಕೆ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಬೇಕು ವಿದ್ಯಾರ್ಥಿಗಳ ಕಲಿಕೆ ಬರಿ ಅಂಕಕ್ಕೆ ಸೀಮಿತವಾಗಬಾರದು ಮಕ್ಕಳು ಪ್ರತಿಭಾ ವಿಕಸನಕ್ಕೆ ದೊರೆತ ಅವಕಾಶವನ್ನು ಬಳಸಿಕೊಂಡು ಕ್ರಿಯಾಶೀಲರಾಗಬೇಕೆಂದು ಸಲಹೆ ನೀಡಿದರು.
ಪ್ರತಿಭಾ ಕಾರಂಜಿಯಲ್ಲಿ ಭಾಷಣ, ಜಾನಪದ ಗೀತೆ, ನೃತ್ಯ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಿತು. ಸ್ಪರ್ಧೆಯಲ್ಲಿ ನಾಪೋಕ್ಲು ವಿಭಾಗದ ಸುಮಾರು 18 ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಬಳಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುಳಾ ಚಿತ್ರಾಪುರ, ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಾಲೆಯ ಆಡಳಿತ ಮಂಡಳಿ ಸದಸ್ಯರು, ವಿವಿಧ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ: ಝಕರಿಯ ನಾಪೋಕ್ಲು