ನಾಪೋಕ್ಲು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ,ನಾಪೋಕ್ಲು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆ ಅಡಿಯಲ್ಲಿ ಸ್ಥಳೀಯ ಕೆಪಿಎಸ್ ಶಾಲಾ ಆವರಣದಲ್ಲಿ ನಿರ್ಮಿಸಲಾದ ಕೂಸಿನ ಮನೆ (ಶಿಶುಪಾಲನಾ) ಕೇಂದ್ರವನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಿಆರ್‌ಪಿ ಮಂಜುಳಾ ಚಿತ್ತಾಪುರ ಸರ್ಕಾರದ ಆದೇಶದಂತೆ ರಾಷ್ಟ್ರೀಯ ಉದ್ಯೋಗ ಖಾತ್ರಿಯ ಪಲಾನುಭವಿ ಮಹಿಳೆಯರ 6 ತಿಂಗಳಿಂದ 3 ವರ್ಷದವರೆಗಿನ ಮಕ್ಕಳ ರಕ್ಷಣೆ ಮತ್ತು ಪಾಲನೆ ಮಾಡುವ ಉದ್ದೇಶದಿಂದ ಈ ಕೇಂದ್ರವನ್ನು ಆರಂಭಿಸಲಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಕರ್ನಾಟಕ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ. ಎ.ಹ್ಯಾರಿಸ್ ಮಾತನಾಡಿ ಮಕ್ಕಳ ಬೆಳವಣಿಗೆ ಮತ್ತು ಪೌಷ್ಟಿಕತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ಈ ಕೇಂದ್ರವನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ, ಪಂಚಾಯಿತಿ ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಮಹಮ್ಮದ್ ಖುರೇಶಿ,ಶಶಿ ಮಂದಣ್ಣ,ಗಂಗಮ್ಮ,ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಶಾಲೆಯ ಮುಖ್ಯಶಿಕ್ಷಕಿ ಚಂದ್ರಕಲಾ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು,ಅರೋಗ್ಯ ಇಲಾಖೆ ಸಿಬ್ಬಂದಿಗಳು, ಪಂಚಾಯಿತಿ ಸಿಬ್ಬಂದಿಗಳು, ಶಾಲೆಯ ಶಿಕ್ಷಕ ವೃಂದ, ಪೋಷಕರು, ಮಕ್ಕಳು ಮತಿತ್ತರರು ಉಪಸ್ಥಿತರಿದ್ದರು.
ವರದಿ :ಝಕರಿಯ ನಾಪೋಕ್ಲು