Reading Time: 3 minutes
ಮೂರ್ನಾಡು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ
ಮೂರ್ನಾಡು: ಶಿಕ್ಷಣ ಸಂಸ್ಥೆಗಳ ಮೂಲಕ ಮಾತ್ರ ದೇಶವು ಬದಲಾವಣೆ ಕಾಣಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದರು.
ಮೂರ್ನಾಡು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದ ಅವರು ಶಿಕ್ಷಣ ವೃತ್ತಿ ಇನ್ನು ಮುಂದಕ್ಕೆ ತುಂಬಾ ಗೌರವಯುತವಾದ ವೃತ್ತಿಯಾಗಿ ಮಾರ್ಪಾಡುಗೊಳ್ಳುತ್ತದೆ. ಶಿಕ್ಷಕರಿಗೆ ವಿಶೇಷವಾದ ಶಕ್ತಿಯಿದ್ದು ಆ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ತಮ ಗುಣಮೌಲ್ಯಗಳನ್ನು ಬೆಳೆಸಲು ಸಾಧ್ಯವಾಗುತ್ತದೆ. ಇದರಿಂದ ಮುಂದಕ್ಕೆ ಕ್ರಿಮಿನಲ್‌ಗಳನ್ನು ಹಿಡಿಯುವ ಕಾರ್ಯಗಳು ಪೊಲೀಸ್ ಇಲಾಖೆಗೆ ಇರುವುದಿಲ್ಲ. ವಿದ್ಯಾರ್ಥಿಗಳು ಸಕರಾತ್ಮಕ ವ್ಯಕ್ತಿತ್ವವುಳ್ಳ ಶಕ್ತಿಯನ್ನು ಹೊಂದಿದ್ದು ಆ ಶಕ್ತಿಯ ಮುಖಾಂತರ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಬೇಕು. ಶಾಲೆಗಳು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ, ಮಕ್ಕಳಲ್ಲಿರುವ ಹಲವು ವಿಧದ ಪ್ರತಿಭೆಗಳನ್ನು ಪ್ರಸ್ತುತ ಪಡಿಸುವ ವೇದಿಕೆಯಾಗಬೇಕು ಎಂದು ಹೇಳಿದರು.
ಸಮಾರಂಭಕ್ಕೆ ಮತ್ತೋರ್ವ ಅತಿಥಿಯಾಗಿ ಆಗಮಿಸಿ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚೌರೀರ ಜಗತ್ ತಿಮ್ಮಯ್ಯ ಮಾತನಾಡಿ ಈ ವಿದ್ಯಾಸಂಸ್ಥೆ ಉತ್ತಮ ಬೆಳವಣಿಗೆ ಕಂಡಿದೆ. ವಿದ್ಯಾಸಂಸ್ಥೆಗೆ ಪೋಷಕರ ಸಹಕಾರ ಅತ್ಯಗತ್ಯವಾಗಿದೆ. ಆಗ ಮಾತ್ರ ವಿದ್ಯಾರ್ಥಿಗಳು ಸಾಧನಗೈಯಲು ಸಾಧ್ಯ ಎಂದ ಅವರು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯಕ. ಪುಸ್ತಕಗಳಿಂದ ಮಾತ್ರ ಪ್ರಪಂಚ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ವಿದ್ಯಾಸಂಸ್ಥೆಯಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲಾಗಿದೆ. ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಕ್ರೀಡೆ, ಎನ್‌ಸಿಸಿ, ಎನ್‌ಎಸ್‌ಎಸ್ ಹೀಗೆ ಹಲವಾರು ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು. ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನಗಳನ್ನು ಮುಖ್ಯ ಅತಿಥಿಗಳು ವಿತರಿಸಿದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ, ನಿರ್ದೇಶಕರುಗಳಾದ ಈರಮಂಡ ಸೋಮಣ್ಣ, ನಂದೇಟಿರ ರಾಜಾ ಮಾದಪ್ಪ, ಪಳಗಂಡ ವಿಠಲ್ ಪೂವಯ್ಯ, ಎ. ಎಂ. ಶೈಲಾ, ಮೂಡೇರ ಹರೀಶ್ ಕಾಳಯ್ಯ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ರೇಖಾ ಚಿಣ್ಣಪ್ಪ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಪ್ರೌಢಶಾಲಾ ಮುಖ್ಯಶಿಕ್ಷಕಿ ಎ.ಎಸ್. ರಶ್ಮಿ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಷ್ಮಾ ಉಪಸ್ಥಿತರಿದ್ದರು.
ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ ಸ್ವಾಗತಿಸಿ, ಪ್ರಾಥಮಿಕ ಶಾಲಾ ಶಿಕ್ಷಕಿ ಲೀನಾ ವಂದಿಸಿದರು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.