ಕುಂಜಿಲ ಕೆ.ಪಿ.ಬಾಣೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ಸಮಾರಂಭ: ಗಮನ ಸೆಳೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ
ನಾಪೋಕ್ಲು: ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಕೆ.ಪಿ.ಬಾಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಶಾಲೆಯ ಹೊರಾಂಗಣದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕುಂಜಿಲ ಗ್ರಾಮದ ಮಾಜಿ ಸೈನಿಕರಾದ ಮೊಯ್ದು ಕುಂಞಿ ಯವರು ಮಕ್ಕಳು ವಿದ್ಯಾರ್ಥಿ ಜೀವನದಿಂದಲೇ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಶಿಕ್ಷಕರು ಬೋಧಿಸಿದ ಪಾಠವನ್ನು ಗಮನದಲ್ಲಿಟ್ಟು ಕಲಿತು ಉತ್ತಮ ವಿದ್ಯಾರ್ಥಿಗಳಾಗಬೇಕು.ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಕಾಪಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳುವ ಮೂಲಕ ದೇಶಕ್ಕೆ ಉತ್ತಮ ಪ್ರಜೆಯಾಗಿ ಬಾಳಬೇಕೆಂದು ಕಿವಿಮಾತು ಹೇಳಿದರು.
ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ, ಕವಾಯತು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ನೋಡುಗರನ್ನು ರಂಜಿಸಿತು. ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.
ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಸಫಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್, ಉಪಾಧ್ಯಕ್ಷೆ ಕಲಿಯಂಡ ಬೀನಾ,ಮಾಜಿ ಅಧ್ಯಕ್ಷೆ ಶೈಲಾ ಕುಟ್ಟಪ್ಪ,ಸದಸ್ಯರಾದ ಬಶೀರ್ ಪೊಯಕ್ಕರೆ, ರಜಾಕ್ ಕುಂಡಂಡ, ಶಾಲೆಯ ಮುಖ್ಯ ಶಿಕ್ಷಕಿ ಪಿ.ಕೆ.ಗಂಗಮ್ಮ, ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹಫೀಲ್, ಶಾಲೆಯ ಎಸ್ ಡಿಎಂಸಿ ಮಾಜಿ ಅಧ್ಯಕ್ಷರಾದ ಅಝೀಝ್,ಇಸ್ಮಾಯಿಲ್, ಶಾಲೆಯ ಎಲ್ಲಾ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು.